ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ಧ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Update: 2024-10-27 13:04 GMT

ಬೆಂಗಳೂರು: "ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎಗೆ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.

ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.

ಕೇಂದ್ರದ ಮೋದಿ ಸರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ, ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್‌ಟಿ ಸೋಮಶೇಖರ್, ಬೆಂ.ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News