‘ಭ್ರಷ್ಟಾಚಾರ ವಿರುದ್ಧ ಜಾಗೃತಿ’ ಪ್ರತಿಜ್ಞಾವಿಧಿ ಬೋಧಿಸಿದ ಸಿಎಂ ಸಿದ್ದರಾಮಯ್ಯ

Update: 2024-10-28 15:57 GMT

ಬೆಂಗಳೂರು : ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಸಚಿವಾಲಯ ಸಿಬ್ಬಂದಿಗಳಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’ರ ಆಚರಣೆಯ ಪ್ರತಿಜ್ಞಾವಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೋಧಿಸಿದ್ದಾರೆ.

ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಆಡಚಣೆಯಾಗಿದೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರಕಾರ, ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರತಿ ನಾಗರಿಕನೂ ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ದನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಬೆಂಬಲಿಸಬೇಕೆಂದು ತಾನು ಅರಿತಿರುವುದರಿಂದ ಈ ರೀತಿ ಪ್ರತಿಜ್ಞೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ. ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಬೋಧಿಸಿದರು.

ಇದೇ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News