ಪತ್ರಿಕೆಗಳಿಗೆ ಸುಳ್ಳು ಜಾಹಿರಾತು | ಮಹಾರಾಷ್ಟ್ರ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರಕಾರ ನಿರ್ಧಾರ : ಸಿಎಂ ಸಿದ್ದರಾಮಯ್ಯ

Update: 2024-11-16 14:24 GMT

ಮಂಗಳವೇಡಾ(ಮಹಾರಾಷ್ಟ್ರ): ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕರ್ನಾಟಕ ಸರಕಾರ ಪ್ರಕರಣ ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳವೇಡಾದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡುತ್ತೇನೆ. ಜಾರಿ ಆಗಿದ್ದರೆ ನಿಮ್ಮ ಸುಳ್ಳಿನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಆ ಮೂಲಕ ಜನರ ಬದುಕಿಗೆ ಆರ್ಥಿಕ ಶಕ್ತಿ ನೀಡುತ್ತದೆ. ಆದುದರಿಂದ, ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಪಂಡರಪುರ ಮಂಗಳವೇಡಾ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ. ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಪಂಡರಪುರ ಮಂಗಳವೇಡಾ. ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದು ಅವರು ಅಭಿಪ್ರಾಯಪಟ್ಟರು.

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಅವರು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ಕಾಳು, ಬೇಳೆ ಎಲ್ಲದರ ಬೆಲೆ ಏರಿಸಿದರು. ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್ ? ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು. ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಬದಲಿಗೆ ಕಾರ್ಪೊರೇಟ್ ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನ ಮನಮೋಹನ್ ಸಿಂಗ್ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು ಎಂದು ಅವರು ಸ್ಮರಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಪ್ರಧಾನಿಗೆ ಸಿದ್ದರಾಮಯ್ಯ ಸವಾಲು ಹಾಕಿದರು.

ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀದಿಸಿದರಲ್ಲ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ. ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು ಎಂದು ಮುಖ್ಯಮಂತ್ರಿ ತಿಳಿಸಿದರು.

ಆಪರೇಷನ್ ಕಮಲದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ ಸೆಡ್ಡು ಹೊಡೆಯಿರಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಸಭೆಯಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣಿತಿ ಶಿಂಧೆ, ಸಚಿವ ಎಂ.ಬಿ.ಪಾಟೀಲ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News