ನನ್ನ ಸವಾಲು ಸ್ವೀಕರಿಸಲು ಮೋದಿಗೆ ಭಯವೇಕೆ? : ಸಿಎಂ ಸಿದ್ದರಾಮಯ್ಯ

Update: 2024-11-16 15:01 GMT

ಸೋಲಾಪುರ(ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳನ್ನು ಬಂದು ಹಸಿ ಹಸಿ ಸುಳ್ಳು ಹೇಳಿ ಹೋಗುತ್ತಾರೆ. ನಮ್ಮ ಸರಕಾರದ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಇಲ್ಲದಿದ್ದರೆ ಅವರು ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಹಾಕಿರುವ ಸವಾಲವನ್ನು ಸ್ವೀಕರಿಸಲು ಅವರಿಗೆ ಭಯವೇಕೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಶನಿವಾರ ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನಮ್ಮ ಸರಕಾರ ನುಡಿದಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿಸಿದೆ. ಶಕ್ತಿ ಯೋಜನೆಯಡಿ ಇಲ್ಲಿಯವರೆಗೂ 325 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ 1.62 ಕೋಟಿ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅನ್ನಭಾಗ್ಯಯೋಜನೆಯಡಿ 1.20 ಕೋಟಿ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು ತಲಾ 170 ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ 1.22 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2 ಸಾವಿರ ರೂಪಾಯಿ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ವರ್ಷ 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ. ಯುವ ನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮೋ ಹೊಂದಿರುವವರಿಗೆ ಭತ್ತೆ ನೀಡಲಾಗುತ್ತಿದೆ. ನಮ್ಮ ಸರಕಾರ ಬಂದ 8 ತಿಂಗಳೊಳಗೆ ಎಲ್ಲ ಐದು ಗ್ಯಾರಂಟಿಗಳು ಆರಂಭವಾಗಿವೆ. ಮಹಾರಾಷ್ಟ್ರದ ಬಿಜೆಪಿ ಮುಖಂಡರು ಮತ್ತು ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ ಎಂದು ಅವರು ಸವಾಲು ಹಾಕಿದರು.

ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿ ರೂ.ಗಳಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ, ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ. ಮಹಾರಾಷ್ಟ್ರ ರಾಜ್ಯ ಪ್ರತಿ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ರೂ.ಮಾತ್ರ ಎಂದು ಸಿದ್ದರಾಮಯ್ಯ ಹೇಳಿದರು.

ಮಹಾರಾಷ್ಟ್ರ ಕಟ್ಟುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ. ಕೇಂದ್ರದ ಮೋದಿ ಸರಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು ಎಂದು ಅವರು ಟೀಕಿಸಿದರು.

ಮಹಾರಾಷ್ಟ್ರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದುದರಿಂದ, ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೇನೆ. ಮನಮೋಹನ್ ಸಿಂಗ್ ಪ್ರಧಾನಿ ಆದಾಗ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.

ಆದುದರಿಂದ, ಮಹಾರಾಷ್ಟ್ರ ಜನತೆ ಮಹಾ ವಿಕಾಸ್ ಅಘಾಡಿಯನ್ನು ಗೆಲ್ಲಿಸುವ ಮೂಲಕ ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮಹಾರಾಷ್ಟ್ರದ ಜನತೆಯ ಆರ್ಥಿಕ ಪ್ರಗತಿಗೆ ಕಾರಣರಾಗಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದೆ ಪ್ರಣಿತಿ ಶಿಂಧೆ, ಸಚಿವ ಎಂ.ಬಿ.ಪಾಟೀಲ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಸೇರಿದಂತೆ ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News