ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ದಿಗ್ವಿಜಯ ಸಾಧಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

Update: 2024-11-23 12:10 GMT

ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವುʼ ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಯ ಗೆಲುವಿನ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ʼಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಂ ಹಾಗೂ ಸಿ.ಪಿ.ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳುʼ ಎಂದರು.

ʼಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-ಜೆಡಿಎಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆʼ ಎಂದು ಸಂತೋಷ ವ್ಯಕ್ತಪಡಿಸಿದರು

ʼನಮ್ಮ ಸರಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆʼ ಎಂದರು.

ʼಇವೆಲ್ಲಕ್ಕಿಂತಲೂ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ಈ ಎರಡೂ ಪಕ್ಷಗಳು ಕೂಡಿಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷ ಸಾಧನೆಗಾಗಿ ನನ್ನ ಕುಟುಂಬದ ವಿರುದ್ದವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆʼ ಎಂದು ವಾಗ್ದಾಳಿ ನಡೆಸಿದರು.

ʼಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು ಕಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿʼ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News