ಉಪಕುಲಪತಿಗಳ ನೇಮಕಾತಿ ತಿದ್ದುಪಡಿ | ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡುವ ನಡವಳಿಕೆ ಸಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿಶ್ವ ವಿದ್ಯಾಲಯ ಧನಸಹಾಯ ಆಯೋಗದ(ಯುಜಿಸಿ)ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ನಡವಳಿಕೆಗಳನ್ನು ರಾಜ್ಯ ಸರಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ವಿಶ್ವ ವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ)ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿವಿಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಸರಕಾರದ ಕ್ರಮ ಖಂಡನೀಯ ಎಂದು ಟೀಕಿಸಿದ್ದಾರೆ.
‘ರಾಜ್ಯ ಸರಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರಕಾರದ ಕಣ್ಣು ಈಗ ರಾಜ್ಯದ ವಿವಿಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರದಿಂದ ರಾಜ್ಯ ಸರಕಾರದ ಮೇಲಿನ ನೇರ ಸವಾರಿಯಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ರಾಜ್ಯದ ವಿವಿಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿವಿಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿವಿಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ-ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
‘ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲ ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹ’
-ಸಿದ್ಧರಾಮಯ್ಯ, ಮುಖ್ಯಮಂತ್ರಿ