ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ನಗರದ ಕ್ವೀನ್ಸ್‍ರಸ್ತೆಯ ಇಂದಿರಾಗಾಂಧಿ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತ್ವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದರು.
ನಮ್ಮ ಮೇಲೆ ಆರೋಪ ಮಾಡುವ ಬಿಜೆಪಿ ಮೊದಲು ತನ್ನ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ. ಕಾಂಗ್ರೆಸ್ ಸರಕಾರ ಒಗ್ಗಟ್ಟಾಗಿದೆ. ಗ್ಯಾರಂಟಿ ಯೋಜನೆ ಭರವಸೆ ಈಡೇರಿಸುವಲ್ಲಿ ನಮ್ಮ ಸರಕಾರ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಮಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಐಸಿಸಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಬ್ಬರಿಗೂ ನಿರ್ದಿಷ್ಟ ಪಾತ್ರವಿದೆ ಮತ್ತು ಎಲ್ಲರೂ ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಒಬ್ಬ ಮುಖ್ಯಮಂತ್ರಿ ಇದ್ದಾರೆ, ಮತ್ತೊಬ್ಬ ಮುಖ್ಯಮಂತ್ರಿಯನ್ನು ಹೊಂದಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.