ರೈತರಿಗೆ ಯುಗಾದಿ ಕೊಡುಗೆ | ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು: ಸಿಎಂ ಸಿದ್ದರಾಮಯ್ಯ

Update: 2025-03-30 17:36 IST
ರೈತರಿಗೆ ಯುಗಾದಿ ಕೊಡುಗೆ | ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

  • whatsapp icon

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ಹೇಳಿದ್ದಾರೆ.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News