ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ; ತಪ್ಪಿತಸ್ಥರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ
Update: 2025-04-05 15:54 IST

ಬೆಂಗಳೂರು: "ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾತನಾಡಿದರು.
ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಬಿಜೆಪಿಯ ಬೇಡಿಕೆಗೆಲ್ಲಾ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿದ್ದು, ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡಲಾಗದು" ಎಂದರು.