ನ.15ರೊಳಗೆ ಬರ ಪರಿಸ್ಥಿತಿಯ ವರದಿ ನೀಡಲು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ನ.4: ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಪ್ರತಿ ತಾಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ನ.15ರೊಳಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯದ 23 ತಾಲೂಕುಗಳ ಪೈಕಿ ಇದುವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನಿರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆ ಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಭೆಗಳಲ್ಲಿ ಚರ್ಚಿಸಲಾಗಿದೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಆದುದರಿಂದ, ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಅಲ್ಲದೆ, ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ ಪರಿಶೀಲಿಸಬೇಕು. ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೆ ರೀತಿಯ ವೈಫಲ್ಯಗಳಾದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.