ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‍ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2025-04-03 18:59 IST
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‍ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ
  • whatsapp icon

ಹೊಸದಿಲ್ಲಿ : ಮೇಕೆದಾಟು, ಭದ್ರಾ ಮೇಲ್ದಂಡೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರಕಾರದಿಂದ ಅಗತ್ಯವಿರುವ ಅನುಮತಿಗಳನ್ನು ತ್ವರಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‍ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಗುರುವಾರ ಹೊಸದಿಲ್ಲಿಯಲ್ಲಿರುವ ಜಲಶಕ್ತಿ ಮಂತ್ರಾಲಯದ ಕಚೇರಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ ಮಾಡಿದ ಸಿದ್ದರಾಮಯ್ಯ, ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ, ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಅನುಮತಿಗಾಗಿ ಬಾಕಿಯಿರುವ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ, ಪ್ರಸ್ತಾವನೆಗಳಿಗೆ ಅನುಮತಿ, ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಾಗೂ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಸಿದ್ದರಾಮಯ್ಯ ನುಡಿದರು.

ಕೇಂದ್ರ ಜಲಶಕ್ತಿ ಸಚಿವರೊಂದಿಗಿನ ಭೇಟಿ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಜಲಶಕ್ತಿ ಹಾಗೂ ರೈಲೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಹೊಸದಿಲ್ಲಿಯಲ್ಲಿನ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News