ಬಜೆಟ್ ಮೇಲಿನ ಚರ್ಚೆ ವೇಳೆ 'ವಾರ್ತಾಭಾರತಿ' ಸಂಪಾದಕೀಯ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜು.20: ‘ರಾಜ್ಯ ಬಜೆಟ್ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಜೆಟ್ ಕುರಿತು ಪತ್ರಿಕೆಗಳಲ್ಲಿ ಬಂದಿರುವ ಸಂಪಾದಕೀಯಗಳ ಬಗ್ಗೆ ಉಲ್ಲೇಖಿಸುತ್ತಾ ‘ವಾರ್ತಾಭಾರತಿ’ಯ ಸಂಪಾದಕೀಯದಲ್ಲಿ ಬರೆದಿದ್ದ ಕೆಲವು ಸಾಲುಗಳನ್ನು ಓದಿದರು.
‘ವಾರ್ತಾಭಾರತಿ’ಯ ಸಂಪಾದಕೀಯದಲ್ಲಿ ಬರೆದಿದ್ದ ‘ಗ್ಯಾರಂಟಿಯ ಹೊರೆಯ ಭಾರ ಇತರ ಕ್ಷೇತ್ರಗಳ ಅಭಿವೃದ್ಧಿಯ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಭಾವಿಸಲಾಗಿತ್ತು. ಆದರೆ, ಸಾಮಾಜಿಕ ವಲಯಗಳನ್ನು ಎಲ್ಲಿಯೂ ನಿರ್ಲಕ್ಷಿಸದೆ, ‘ಸಮಪಾಲು-ಸಮಬಾಳು’ ಘೋಷಣೆಯನ್ನು ಅನುಷ್ಠಾನಗೊಳಿಸುವ ಗರಿಷ್ಠ ಪ್ರಯತ್ನವನ್ನು ಬಜೆಟ್ ಮಾಡಿದೆ’ ಎಂಬ ಸಾಲುಗಳನ್ನು ಅವರು ಓದಿದರು.
''ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಆ ಮೂಲಕ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯ ಪರಿಚಯವಾಗುತ್ತಿದೆ'' ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು.
'ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ದೇಶದಲ್ಲಿಯೇ ದೊಡ್ಡ ಮೊತ್ತ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ. ವಿರೋಧ ಪಕ್ಷದವರು ಗ್ಯಾರಂಟಿ ಯೋ ಜನೆಗಳ ಜಾರಿ ಸಾಧ್ಯವಿಲ್ಲ ಎಂದರು. ಆದರೆ ಈಗಾಗಲೇ ಶಕ್ತಿ, ಅನ್ನಭಾಗ್ಯ ಹಾಗೂ ಗೃಹ ಜ್ಯೋತಿ ಯೋಜನೆಗಳು ಜಾರಿಯಾಗಿವೆ' ಎಂದು ಅವರು ಹೇಳಿದರು.
''ಗೃಹ ಲಕ್ಷ್ಮಿ ಯೋಜನೆ ಪ್ರಾರಂಭ''
ಗೃಹ ಲಕ್ಷ್ಮಿ ಯೋಜನೆಗೆ ಇಂದಿನಿಂದ ನೋಂದಣಿ ಪ್ರಾರಂಭವಾಗಿದೆ. ಯುವನಿಧಿ ಯೋಜನೆ ಬಹುತೇಕ ಡಿಸೆಂಬರ್ ತಿಂಗಳಿನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ಎಲ್ಲ ಯೋಜನೆಗಳಿಗೆ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ. ಜೊತೆಗೆ, ಅನುದಾನ ಕ್ರೋಢೀಕರಣವನ್ನೂ ಆಯವ್ಯಯದಲ್ಲಿ ವಿವರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಕಾರ್ಯಕ್ರಮಗಳಿಗೆ ವಾರ್ಷಿಕ ಒಟ್ಟು 52,068 ಕೋಟಿ ರೂ.ಗಳು ಅಗತ್ಯವಿದೆ. 1.30 ಕೋಟಿ ಕುಟುಂಬಗಳಿಗೆ ಈ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯಲಿದೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 4-5 ಸಾವಿರ ರೂ. ಅಂದರೆ ವಾರ್ಷಿಕ 48 ರಿಂದ 60 ಸಾವಿರ ರೂ. ದೊರೆಯಲಿದೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಗಾತ್ರದ ಮೊತ್ತವನ್ನು ಜಾತಿ ಧರ್ಮ ನೋಡದೇ ಮಾಡಿರುವ ಮೊದಲ ರಾಜ್ಯ ಕರ್ನಾಟಕ. ಈ ವರ್ಷ 35,410 ಕೋಟಿ ರೂ.ಗಳನ್ನು 5 ಗ್ಯಾರೆಂಟಿಗಳಿಗೆ ಮೀಸಲಿರಿಸಿದ್ದೇವೆ ಎಂದು ಅವರು ವಿವರಿಸಿದರು.