ಬಿಜೆಪಿ ಸರಕಾರದ ಅವಧಿಯಲ್ಲಿನ ಹಗರಣಗಳ ತನಿಖೆಗೆ 'ಸಿಟ್' ರಚನೆ ಬಗ್ಗೆ ಸಿಎಂ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜೂ. 28: ‘ಬಿಜೆಪಿ ಸರಕಾರದ ಅವಧಿಯಲ್ಲಿನ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡ(ಸಿಟ್) ರಚನೆ ಮಾಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೀರ್ಮಾನ ಮಾಡಲಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದಿನ ಸಚಿವ ಸಂಪುಟದಲ್ಲಿ ಈ ಸಂಬಂಧ ಸಮಾಲೋಚನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಮಾಡುವುದಿಲ್ಲ. ಸಿಎಂ ಮತ್ತು ಡಿಸಿಎಂ ತೀರ್ಮಾನ ಮಾಡಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ‘ಬಿಟ್ ಕಾಯಿನ್’ ಹಗರಣ, ಗಂಗಾ ಕಲ್ಯಾಣ ಕೊಳವೆಬಾವಿ ಹಗರಣ, ಪಿಎಸ್‍ಐ ನೇಮಕಾತಿ ಅಕ್ರಮವೂ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದವು. ಈ ಬಗ್ಗೆ ಸಮಗ್ರ ತನಿಖೆ ಅಗತ್ಯವಿದ್ದು, ಪರಿಣತರ ತಂಡ ರಚನೆ ಮಾಡಬೇಕಿದೆ. ಹೀಗಾದರೆ ಮಾತ್ರವೇ ಸತ್ಯ ಬೆಳಕಿಗೆ ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.