ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್‌ನ ನೀಚ ರಾಜಕಾರಣ: ಬಿ.ವೈ. ವಿಜಯೇಂದ್ರ

Update: 2024-11-30 05:51 GMT

PC: fb.com

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಇತ್ತೀಚೆಗೆ ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕೆಂದು ವಿವಾದಾತ್ಮಕ ಮಾತುಗಳನ್ನಾಡಿದ್ದರು.

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಖಾಸಗಿ ವ್ಯಕ್ತಿಗಳು ವಿವಿಧ ಕಲಂಗಳ ಅಡಿ ದೂರು ದಾಖಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸ್ವಾಮೀಜಿ ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ ಎಂದು ಹೇಳಿದ್ದಾರೆ.

ಶ್ರೀಗಳು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಲೇ ಇದೆ. ಚಂದ್ರಶೇಖರನಾಥ ಶ್ರೀಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಎಂದು X ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News