ಪಕ್ಷದಲ್ಲಿ ನಿಷ್ಕ್ರಿಯರಾಗಿರುವವರ ಬದಲಾವಣೆ ಖಚಿತ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಪಕ್ಷ ಸಂಘಟನೆಗೆ ಯಾರೂ ಕಾರ್ಯೋನ್ಮುಖರಾಗುವುದಿಲ್ಲವೋ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‍ಪಿ) ಸಭೆಯಲ್ಲಿಯೂ ನಾನು ಈ ವಿಚಾರ ಹೇಳಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎಲ್ಲ ಜಿಲ್ಲೆ, ತಾಲೂಕುಗಳಲ್ಲಿಯೂ ಪಕ್ಷದ ಕಚೇರಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ. ಆದರೆ, ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಇನ್ನು ಅಧಿವೇಶನದ ಬಳಿಕ ಇಬ್ಬರು ಮಂತ್ರಿಗಳು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಭಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು ಎಂದರು.
ಆ ಹಿನ್ನೆಲೆಯಲ್ಲಿ ಪಕ್ಷವು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲ ವಿಚಾರಗಳನ್ನು ಚರ್ಚೆ ಮಾಡಿ, ಮಾರ್ಗದರ್ಶನ ನೀಡಲು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.