ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ ಸಂತೋಷ್ ಲಾಡ್

Update: 2023-11-05 15:41 GMT

ಹಾವೇರಿ, ನ.5: ರಾಜ್ಯ ಸರಕಾರ ದುಡಿಯುವ ವರ್ಗದ ಪರವಾಗಿದ್ದು, ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ರವಿವಾರ ಆಯೋಜಿಸಿದ್ದ ಕಾರ್ಮಿಕ ಸಂಘಟನೆಗಳು ಹಾಗೂ ಉದ್ಯಮದಾರರೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾರ್ಮಿಕರಿಗಾಗಿಯೇ ಯೋಜನೆ ರೂಪಿಸಲಾಗುತ್ತಿದೆ. ಆದರೆ, ಸ್ವಲ್ಪ ಸಮಯಾವಕಾಶ ನೀಡಬೇಕು. ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ಸರಕಾರ ದಿಟ್ಟ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಕಾರ್ಮಿಕರಿಗೆ ಆತಂಕಬೇಡ ಎಂದರು.

ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲಾ ರೀತಿಯ ಸಣ್ಣಪುಟ್ಟ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಲಾಡ್ ಇದೇ ವೇಳೆ ಹೇಳಿದರು.

ಸಾಮಾಜಿಕ ಭದ್ರತಾ ಯೋಜನೆ

ರಾಜ್ಯದಿಂದ 43 ವಿವಿಧ ಕ್ಷೇತ್ರಗಳು ಹಾಗೂ ಕೇಂದ್ರದ 397 ಕ್ಷೇತ್ರಗಳನ್ನು ಅಸಂಘಟಿತ ಕಾರ್ಮಿಕ ವಲಯವೆಂದು ಪರಿಗಣಿಸಲಾಗಿದೆ. ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕ ವಲಯ ವ್ಯಾಪ್ತಿಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಲು ಕ್ರಮ ವಹಿಸಲಾಗಿದ್ದು, ಆಟೋ ಚಾಲಕರು, ವಾಣಿಜ್ಯ ವಾಹನಗಳ ವಾಹನ ಚಾಲಕರು, ಗ್ಯಾರೇಜ್‌ಗಳ ಕಾರ್ಮಿಕರು ಸೇರಿದಂತೆ ರಾಜ್ಯದ ಸುಮಾರು 40 ರಿಂದ 50 ಲಕ್ಷ ಜನರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಿನಿಮಾ ಮಂದಿರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲಾಗುವುದು. ಎಪಿಎಂಸಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಹಮಾಲರು ಮುಂತಾದ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ದೊರಕಿಸಲು ಸೂಕ್ತ ಕಾನೂನು ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

ಬೋಗಸ್ ಕಾರ್ಡ್ ಸೃಷ್ಟಿ ವಿರುದ್ಧ ಕ್ರಮ

ಬೋಗಸ್ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸೌಲಭ್ಯ ದುರುಪಯೋಗ ಪಡಿಸಿಕೊಂಡವರ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ. ಇದಕ್ಕೆ ಸಹಕರಿಸಿದ ಕಾರ್ಮಿಕ ಸಂಘಟನೆಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾರ್ವಜನಿಕರ ಅನುಕೂಲಕ್ಕಾಗಿ 24X7 ಕಾರ್ಯ ನಿರ್ವಹಿಸುವ ಸಹಾಯವಾಣಿ ಸಂಖ್ಯೆ 155214 ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಯಲ್ಲಿ ಕಾರ್ಮಿಕರು ಮೊಬೈಲ್ ಸಂಖ್ಯೆ +91 9333333684 ವಾಟ್ಸಪ್ ಹಾಗೂ ಟೆಲಿಗ್ರಾಂ ಮೂಲಕ ದೂರು ಸಲ್ಲಿಸಬಹುದು ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಕಾರ್ಮಿಕ ಸಮುದಾಯ ಭವನವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಿದರು. ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಹಿರೇಕೆರೂರು ಶಾಸಕ ಯು. ಬಿ. ಬಣಕಾರ್ ಹಾಗೂ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News