ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಕರಾರು: ದೇವೇಗೌಡ, ಕುಮಾರಸ್ವಾಮಿಗೆ ನೋಟೀಸ್ ಜಾರಿ
ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಹಂಗಾಮಿ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ನೋಟಿಸ್ ಮತ್ತು ಸಮನ್ಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.
ಜೆಡಿಎಸ್ ಪಕ್ಷದ ಸಂವಿಧಾನಕ್ಕೆ ವಿರುದ್ಧವಾಗಿ ತನ್ನನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಜೊತೆಗೆ, ತಮ್ಮ ವಾದ ಆಲಿಸದೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ನಡೆಸಲು ಉದ್ದೇಶಿಸಲಾಗಿದೆ ಎಂದು ಆಕ್ಷೇಪಿಸಿ ಸಿ.ಎಂ.ಇಬ್ರಾಹೀಂ ಸಲ್ಲಿಸಿರುವ ಅರ್ಜಿಯ ಸಂಬಂಧ ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್ ಮತ್ತು ಸಮನ್ಸ್ ಜಾರಿ ಮಾಡಿದೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಯಾವಾಗ ಚುನಾವಣೆ ನಡೆಸಲಾಗುತ್ತದೆ ಎಂಬುದನ್ನು ಇಬ್ರಾಹೀಂ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಎಲ್ಲಿಯೂ ಉಲ್ಲೇಖಿಸಿಲ್ಲ. ಅರ್ಜಿದಾರ, ತಮ್ಮ ಹಕ್ಕಿಗೆ ಅಪಾಯ ಇದೆ ಎಂಬುದನ್ನು ತೋರಿಸದೆ ಇರುವಾಗ ಪ್ರತಿವಾದಿಗಳ ವಾದವನ್ನು ಆಲಿಸದೆ ನಿರ್ಬಂಧ ಆದೇಶ ಮಾಡಲು ಆಗದು ಎಂದು ನ್ಯಾಯಾಲಯವು ಉಲ್ಲೇಖಿಸಿದೆ.
ಆದಕಾರಣ ಪ್ರತಿವಾದಿಗಳಿಗೆ ನೋಟಿಸ್ ಹಾಗೂ ಸಮನ್ಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದಿನ ಸಾಲಿನ ಜನವರಿ 4ಕ್ಕೆ ನ್ಯಾಯಾಲಯ ಮುಂದೂಡಿದೆ.