ಯಡಿಯೂರಪ್ಪ, ವಿಜಯೇಂದ್ರ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ತನಿಖಾ ಪ್ರಗತಿ ವಿವರ ಸಲ್ಲಿಸದಿರುವುದಕ್ಕೆ ಕೋರ್ಟ್ ಅಸಮಾಧಾನ

Update: 2024-08-09 09:14 GMT

ಬೆಂಗಳೂರು, ಆ.9: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಮರ್ಪಕ ತನಿಖಾ ಪ್ರಗತಿ ವಿವರವನ್ನು ಸಲ್ಲಿಸದಿರುವುದ್ದಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾಧಿಕಾರಿ ಹಾಜರಾಗಿದ್ದು, ಕೋರ್ಟ್ ನೀಡಿದ್ದ ಶೋಕಾಸ್ ನೋಟಿಸ್ಗೆ ವಿವರಣೆ ನೀಡಿದ್ದಾರೆ.

ಎರಡು ವರ್ಷಗಳಾದರೂ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತೀ ಬಾರಿಯೂ ಶೆಲ್ ಕಂಪೆನಿಗಳ ಬಗ್ಗೆ ತನಿಖೆ ನಡೆಸಿರುವುದಾಗಿ ಮಾತ್ರವೇ ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಡಿವೈಎಸ್ಪಿ ಸತೀಶ್ ಎಂ.ಎಚ್ ವರ್ತನೆ ಬಗ್ಗೆ ನ್ಯಾಯಾಲಯ ಆಕ್ಷೇಪಿಸಿದೆ.

ಲೋಕಾಯುಕ್ತ ಎಸ್ಪಿ, ತನಿಖಾಧಿಕಾರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಬಿಡಿಎ ಅಪಾರ್ಟ್ ಮೆಂಟ್ ಟೆಂಡರ್ನಲ್ಲಿ ಸುಮಾರು 8.41 ಕೋಟಿ ರೂ. ನಕಲಿ ಕಂಪನಿಗಳಿಗೆ ವರ್ಗಾವಣೆ ಮಾಡುವ ಮೂಲಕ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಎಸ್.ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ವರ್ಗಾವಣೆ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ಎಂಬವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು.

ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೊಟ್ಯಂತರ ರೂ. ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರರ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸ್ ಇನ್ ಸ್ಪೆಪೆಕ್ಟರ್ ಗೆ 2022ರ ಸೆಪ್ಟೆಂಬರ್ ನಲ್ಲಿ ಆದೇಶ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News