ಕೋವಿಡ್-19; ಡಿ.23ರ ವೇಳೆಗೆ ಪ್ರತಿನಿತ್ಯ 5 ಸಾವಿರ ಪರೀಕ್ಷೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

Update: 2023-12-19 15:17 GMT

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು. ಅಲ್ಲದೆ ಡಿ.23ರ ಶನಿವಾರದ ವೇಳೆಗೆ ಪ್ರತಿನಿತ್ಯ 5 ಸಾವಿರ ಪ್ರಕರಣಗಳ ಪರೀಕ್ಷೆ ನಡೆಸುವಂತೆ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಹೃದಯ ಸಂಬಂಧಿ, ಉಸಿರಾಟದ ಸಮಸ್ಯೆ, ಜ್ವರ ಸೇರಿದಂತೆ ಇನ್ನಿತರ ಗಂಭೀರ ಸ್ವರೂಪದ ಸಮಸ್ಯೆ ಇರುವವರಿಗೆ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಸನ್ನದ್ಧ: ಮುನ್ನಚ್ಚರಿಕೆ ಕ್ರಮವಾಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ವೆಂಟಲೇಟರ್, ಐಸಿಯು ಹಾಸಿಗೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಸೂಚಿಸಲಾಗಿದೆ. ಹೊರ ರಾಜ್ಯಗಳಿಂದ ಬಂದವರಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳಿದ್ದವರನ್ನ ಕಡ್ಡಾಯ ಪರೀಕ್ಷೆಗೆ ಒಳಪಡಿಸಬೇಕು. ಕೇಂದ್ರದ ಮಾರ್ಗಸೂಚಿ ಅನ್ವಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ, ಸದ್ಯಕ್ಕೆ ಗಡಿಯಲ್ಲಿ ನಿರ್ಬಂಧ ಹೇರುವ ಸ್ಥಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಾಳೆ (ಡಿ.20) ಕೇಂದ್ರ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ವರ್ಚುವಲ್ ಸಭೆ ನಡೆಯಲಿದ್ದು, ಕೇಂದ್ರ ಸರಕಾರದ ಮಾಹಿತಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಸಿಎಂ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News