ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿ!; ಶೀಘ್ರದಲ್ಲೇ ಪಕ್ಷ ಸೇರ್ಪಡೆ?
ಬೆಂಗಳೂರು: ಮಾಜಿ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲಿರುವುದು ಖಚಿತ ಎನ್ನಲಾಗಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿದ್ದ ಚನ್ನಪಟ್ಟಣದಿಂದ ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ಸಿ.ಪಿ. ಯೋಗೇಶ್ವರ್ ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈಗ ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ್ತೊಂದು ಹಿನ್ನಡೆಯಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಸಿಪಿ ಯೋಗೇಶ್ವರ್ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ಕಳೆದೆರಡು ದಿನಗಳ ಹಿಂದಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್.ಡಿ. ಕುಮಾರಸ್ವಾಮಿ, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸೂಚನೆ ನೀಡಿದ್ದರು.
ಈ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ನಾನು ಸ್ಪರ್ಧಿಸಿದರೆ ಬಿಜೆಪಿಯಿಂದ ಮಾತ್ರ. ಬಿಜೆಪಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆ ನೀಡಿದ್ದರು. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, ಯೋಗೇಶ್ವರ್ ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ವಿಷಯ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.