ಮುಸ್ಲಿಂ ಮೀಸಲಾತಿ ಕುರಿತು ಪ್ರಧಾನಿಯ ಆರೋಪ ಆಧಾರ ರಹಿತ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-05-16 14:16 GMT

screengrab : x/@ANI

ಲಖನೌ : ರಾಜ್ಯದಲ್ಲಿನ ಮುಸ್ಲಿಂ ಮೀಸಲಾತಿ ಕುರಿತು ಕಾಂಗ್ರೆಸ್ ಸರಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಆರೋಪಗಳು ಆಧಾರ ರಹಿತವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಉತ್ತರಪ್ರದೇಶದ ಲಖನೌನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಸ್ಲಿಮರಿಗೆ ಕಳೆದ 30-40 ವರ್ಷಗಳಿಂದ ಕರ್ನಾಟಕದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ರಾಜಕೀಯ ಉದ್ದೇಶಕ್ಕೆ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಾವೆಲ್ಲರೂ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲ ವರ್ಗದ ಜನರ ರಕ್ಷಣೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಹೀಗಾಗಿ ನಾವು ಎಲ್ಲ ವರ್ಗದ ಜನರ ರಕ್ಷಣೆ ಮಾಡಲು ಬದ್ಧವಾಗಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರಕಾರ ಎಸ್‍ಐಟಿ ರಚನೆ ಮಾಡಿದೆ. ಈ ಪ್ರಕರಣ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಈ ಪ್ರಕರಣದಲ್ಲಿ ಮೋದಿ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆ. ಕೇಂದ್ರ ಸರಕಾರ ಆತನಿಗೆ ಪಾಸ್  ಪೋರ್ಟ್ ವಿತರಣೆ ಮಾಡಿದೆ. ನಾವು ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು, ಆತನನ್ನು ಬಂಧಿಸುತ್ತೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News