ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌ನಿಂದ ನೈತಿಕತೆ ಪ್ರಶ್ನೆ ಸಭೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-08-01 17:36 GMT

ಬೆಂಗಳೂರು : "ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ನಾಳೆಯಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ತುರ್ತು ಮಾಧ್ಯಮಗೋಷ್ಟಿ ನಡೆಸಿದ ಶಿವಕುಮಾರ್ ಅವರು, "ನಾಳೆ (ಶುಕ್ರವಾರ) ಬಿಡದಿಯಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಹಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು" ಎಂದು ತಿಳಿಸಿದರು.

"ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲಿ ಒಂದೊಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ. ಆಗಸ್ಟ್ 2ರಂದು ಬಿಡದಿ, 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ರಂದು ಮಂಡ್ಯದಲ್ಲಿ, 9ರಂದು ಮೈಸೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.

"ಇದೇ ವೇಳೆ ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜನರಿಗೆ ತಿಳಿಸುತ್ತೇವೆ. ಪ್ರತಿನಿತ್ಯ ಸಚಿವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶಾಸಕರು ಹಾಗು ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.

ಪಾದಯಾತ್ರೆ ಸ್ವಾಗತಿಸುತ್ತೇನೆ:"ಅವರ ಪಾದಯಾತ್ರೆಗೆ ನಮ್ಮ ವತಿಯಿಂದ ಯಾವುದೇ ಅಡ್ಡಿ ಮಾಡುವುದಿಲ್ಲ. ಬೆಂಗಳೂರಿನಲ್ಲಿ ನಗರದ ಒಳಗೆ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುತ್ತೇವೆ. ಅವರ ಪಾದಯಾತ್ರೆ ಬೇಡ ಎಂದು ನಾನೇಕೆ ಹೇಳಲಿ. ನಾನು ಅವರ ಪಾದಯಾತ್ರೆ ಸ್ವಾಗತಿಸುತ್ತೇವೆ. ನಮ್ಮನ್ನು ನೋಡಿ ಅವರು ಕಲಿಯುವ ಪ್ರಯತ್ನ ಮಾಡುತ್ತಿದ್ದಾರೆ, ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಅವರ ವಿಚಾರ ತಿಳಿಸಲಿ, ನಮ್ಮ ವಿಚಾರ ನಾವು ತಿಳಿಸುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News