ಜ.21ಕ್ಕೆ ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2025-01-08 14:20 GMT

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ವನ್ನು ಇದೇ ತಿಂಗಳ 21ರಂದು ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿ.26ಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚಿಸಿ ಜನವರಿ 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಜ.21ರಂದು ಬೆಳಗ್ಗೆ ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ ಎಐಸಿಸಿ ವತಿಯಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂಬ ಹೆಸರಿನಡಿಯಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಈ ಸಮಾವೇಶದ ಹಿನ್ನೆಲೆಯಲ್ಲಿ ಜ.13ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

ಈ ಮಧ್ಯೆ ಜ.15 ಹಾಗೂ 16ರಂದು ಎಲ್ಲಾ ಶಾಸಕರು, ಪರಾಜಿತ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮ ರದ್ದು ಮಾಡಿ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಪದಾಧಿಕಾರಿಗಳು, ಉಸ್ತುವಾರಿ ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಮಂತ್ರಿಗಳು, ಶಾಸಕರು. ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ತಮ್ಮ ಜವಾಬ್ದಾರಿ ಮುಂದುವರಿಸಬೇಕಿದೆ ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News