ಗ್ಯಾರಂಟಿಗಳಿಂದ ಸರಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-07-11 14:18 GMT

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಳೆದ ವರ್ಷ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್‍ನಲ್ಲಿ 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಮಳೆಗೆ ಪ್ರಾರ್ಥಿಸೋಣ: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಿಆರ್‍ಡಬ್ಲ್ಯೂಸಿ ಸಭೆ ತೀರ್ಮಾನ ಮಾಡಿದೆ. ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಶಿವಕುಮಾರ್ ತಿಳಿಸಿದರು.

ಸಭೆ ಮುಂದುವರಿಯಲಿದೆ: ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಎಐಸಿಸಿ ಸತ್ಯಶೋಧನಾ ಸಮಿತಿ ಶಾಸಕರು ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ನಾಳೆ(ಜು.12) ಪರಾಜಿತ ಅಭ್ಯರ್ಥಿಗಳು ಹಾಗೂ ಇತರ ನಾಯಕರ ಅಭಿಪ್ರಾಯ ಸಂಗ್ರಹಿಸಲಿದೆ. ನಂತರ ಈ ಸಮಿತಿಯು ಎಐಸಿಸಿಗೆ ತನ್ನ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News