‘ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅರ್ಥಪೂರ್ಣ, ಅದ್ಧೂರಿಯಾಗಿ ಆಚರಣೆಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Update: 2023-07-31 18:22 GMT

ಸಿಎಂ ಸಿದ್ದರಾಮಯ್ಯ (PTI)

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ದಸರಾ ಹಬ್ಬವನ್ನು ಅ.15ರಂದು ಬೆಳಗ್ಗೆ 10.15 ರಿಂದ 10.30ಕ್ಕೆ ಸಲ್ಲುವ ಶುಭ ಮಹೂರ್ತದಲ್ಲಿ ಉದ್ಘಾಟಿಸಲಾಗುವುದು. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕøತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಶಿಷ್ಟ ದೀಪಾಲಂಕಾರ: ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ಇರಬೇಕು ಎಂದು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ವಸ್ತು ಪ್ರದರ್ಶನ: ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಭರ್ತಿಯಾಗಿರಬೇಕೆಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ: ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಏರ್ ಶೋ: ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನ (ಏರ್ ಶೋ) ಹಮ್ಮಿಕೊಳ್ಳುವ ಉದ್ದೇಶವಿದೆ. ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು. ಈ ಹಿಂದೆ ನಮ್ಮ ಸರಕಾರವಿದ್ದಾಗ ಏರ್ ಶೋ ಆಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಹೇಳಿದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಮಿತಿಯು ನನಗೆ ನೀಡಿದೆ. ಕೆ.ಆರ್.ಪೇಟೆ ಶಾಸಕರು ಸುತ್ತೂರು ಶ್ರೀಗಳ ಹೆಸರನ್ನು ಪ್ರಸ್ತಾವಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ಯಾರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಬೇಕು ಎಂದು ತೀರ್ಮಾನಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ಅಂದಾಜು ಮಾಡಿ ತಿಳಿಸಲಿದೆ. ಅದರ ಆಧಾರದ ಮೇಲೆ ಸರಕಾರ ಅನುದಾನ ಒದಗಿಸುತ್ತದೆ. ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ: ‘ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆಗಳ ಜೊತೆಗೆ 5 ಗ್ಯಾರಂಟಿಗಳನ್ನು(ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವ ನಿಧಿ) ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸಮಿತಿಯಲ್ಲಿ ಹಲವರು ಅಭಿಪ್ರಾಯಪಟ್ಟಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News