ಸರಕಾರಿ ಆಸ್ತಿ ಒತ್ತುವರಿದಾರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-12-12 08:06 GMT

ಬೆಳಗಾವಿ: ‘ಬೆಂಗಳೂರು ನಗರದಲ್ಲಿ ಸರಕಾರಿ ಆಸ್ತಿ ಹಾಗೂ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರತ್ನ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ವಾರ್ಡ್ ನಂ.73ರಲ್ಲಿ 2 ಎಕರೆಯ ಪಾರ್ಕ್ ಜಾಗ ಒತ್ತುವರಿಯಾಗಿದೆ. ಕೆಲವರು ಪಾರ್ಕ್‍ಗೆ ಬೋರ್ಡ್ ಹಾಕಿದ್ದು ನ್ಯಾಯಲಯದಲ್ಲಿ ತಮ್ಮ ಪರವಾಗಿ ತೀರ್ಪು ಬಂದಿದೆ ಎಂದು ತಿಳಿಸಿದ್ದಾರೆ.

ಪ್ರಮೋದ್ ಲೇಔಟ್‍ನಲ್ಲಿ 2 ಎಕರೆ ವಿಸ್ತೀರ್ಣದಲ್ಲಿರುವ ಪಾರ್ಕ್‍ನಲ್ಲಿದ್ದ ಸಲಕರಣೆಗಳನ್ನು ರಾತ್ರೋ ತೆರವು ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕ್ರಮ ಕೈಗೊಳ್ಳಲು ಮುಂದಾದರೆ ಪ್ರಭಾವಿಗಳ ಹೆಸರನ್ನು ಹೇಳುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಸರಕಾರಿ ಭೂಮಿ ಒತ್ತುವರಿ ಮಾಡಿರುವವರು ಯಾರೇ ಆಗಿದ್ದರೂ, ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವಿಗೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.

ಸರಕಾರದ ಆಸ್ತಿ-ಪಾಸ್ತಿಗಳ ರಕ್ಷಣೆಯ ವಿಚಾರದಲ್ಲಿ ಸರಕಾರ ಯಾವುದೇ ಕಾರಣಕ್ಕೂ ಯಾರೊಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ಭೂ ಒತ್ತುವರಿದಾರರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿವಕುಮಾರ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News