ಯುವನಿಧಿ ಸೌಲಭ್ಯಕ್ಕೆ ‘ಸ್ವಯಂ ಉದ್ಯೋಗಿಯಲ್ಲ’ ಎಂಬ ಘೋಷಣೆ ಕಡ್ಡಾಯ

Update: 2024-02-23 13:08 GMT

ಬೆಂಗಳೂರು : ‘ಯುವನಿಧಿ’ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

2022-23ರ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ/ಸ್ನಾತಕೊತ್ತರ ಪದವಿ ಮತ್ತು ಡಿಪ್ಲೋಮಾವನ್ನು 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು, ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ 2024ರ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು ‘ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ’ಎಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ  ಫೆ.29ರ ವರೆಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ

ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಎಸ್‍ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು  https://sevasindhugs.karnataka.gov.in/ ಜಾಲತಾಣ ವಿಕ್ಷೀಸಬಹುದು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News