‘ರಾಮನಗರ’ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಿಎಂಗೆ ಪ್ರಸ್ತಾವ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-07-09 13:37 GMT

Photo:X/@DKShivakumar

ಬೆಂಗಳೂರು: ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿನ ಸಿಎಂ ಕಚೇರಿಯಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗವು ಸಿಎಂ ಅನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಲಾಯಿತು.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸಹಿತ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು.

ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ಅಗತ್ಯ. ಬೆಂಗಳೂರು ಜಾಗತಿಕ ಮನ್ನಣೆ ಹೊಂದಿದ್ದು, ಈ ಜಿಲ್ಲೆಯ ಹೆಸರು ಉಳಿಸಿಕೊಳ್ಳಲು ನನ್ನ ಮುಖಂಡತ್ವದಲ್ಲಿ ಜಿಲ್ಲೆಯ ನಾಯಕರು ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರು ವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ. ನಮ್ಮ ಹೆಸರನ್ನು ನಾವು ಉಳಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಹೊಸ ಜಿಲ್ಲೆಯಲ್ಲ: ‘ನಾವು ಯಾವುದೇ ಹೊಸ ಜಿಲ್ಲೆ ಮಾಡುತ್ತಿಲ್ಲ. ಇರುವ ಜಿಲ್ಲೆ ಹಾಗೇ ಇರಲಿದೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ, ಕನಕಪುರ ಸೇರಿ ಐದು ತಾಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕಾರಣಕ್ಕೆ ಮುಂದಾಗಿದ್ದೇವೆ’ ಎಂದು ಅವರು ಸ್ಪಷ್ಟಣೆ ನೀಡಿದರು.

ಸಿಸಿಟಿವಿ ಕ್ಯಾಮೆರ ಕಣ್ಗಾವಲು: ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್‍ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರ ಅಳವಡಿಸಲು ಸೂಚನೆ ನೀಡಲಾಗಿದೆ. ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಡೆಂಗಿ ಜ್ವರ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲ್ಲ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಿಎಂ ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದು ಶಿವಕುಮಾರ್ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣಕಾಸಿನ ವರ್ಗಾವಣೆ ಹಿನ್ನೆಲೆಯಲ್ಲಿ ಸಚಿವರೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದು, ಸ್ವತಃ ಸಚಿವರೇ ಇದರಲ್ಲಿ ನನ್ನ ಪಾತ್ರವಿಲ್ಲ’ ಎಂದು ಹೇಳಿದ್ದಾರೆ. ಅವರಿಗೂ ನೋಟೀಸ್ ನೀಡಲಾಗಿದೆ ಎಂದು ಮಾಧ್ಯಮಗಳ ಮೂಲಕ ತಿಳಿಯಿತು. ನಾನು ಇದರಲ್ಲಿ ಮೂಗು ತೂರಿಸಲು ಹೋಗುವುದಿಲ್ಲ. ಭ್ರμÁ್ಟಚಾರದಲ್ಲಿ ನಮ್ಮ ಮಂತ್ರಿ, ಶಾಸಕರ ಪಾತ್ರವಿಲ್ಲ’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News