'ಅನುದಾನ ಬಿಡುಗಡೆಗೂ ಹಣಕ್ಕೆ ಬೇಡಿಕೆ': 20ಕ್ಕೂ ಹೆಚ್ಚು ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ಶಾಸಕರು ಬರೆದ ಪತ್ರ ಬಹಿರಂಗ
ಬೆಂಗಳೂರು: 20ಕ್ಕೂ ಹೆಚ್ಚು ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕಾಂಗ್ರೆಸ್‌ನ ಹಿರಿಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
ಬಿಜೆಪಿ ಆರೋಪದ ಬೆನ್ನಲ್ಲೇ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರ ಲೆಟರ್ ಹೆಡ್ ನಲ್ಲಿರುವ ಪತ್ರವೊಂದು ಹರಿದಾಡುತ್ತಿದೆ. ಈ ಪತ್ರದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ, ಪಿಎಮ್ ನರೇಂದ್ರ ಸ್ವಾಮಿ ಸೇರಿ 20ಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದು, ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
''ಕೆಲವು ಸಚಿವರು ಅನುದಾನ ಬಿಡುಗಡೆಗೆ ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ'' ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಪತ್ರದಲ್ಲೇನಿದೆ ?
''ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ''
''ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ''
''ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ'' ಎಂದು ಪತ್ರದಲ್ಲಿ ಉಲ್ಲೇಖವಿದೆ.
ಪತ್ರ ನಕಲಿ: ಶಾಸಕ ಬಿ.ಆರ್ ಪಾಟೀಲ್ ಸ್ಪಷ್ಟನೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಳಂದ ಶಾಸಕ ಬಿ.ಆರ್ ಪಾಟೀಲ್, ''ಸಚಿವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನನ್ನ ಹೆಸರಿನಲ್ಲಿ ಬರೆದು ವೈರಲ್ ಆಗುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟನೆ ನೀಡಿದ್ದಾರೆ.
''ಈ ಹಿಂದೆ ನಾನು ಶಾಸಕನಾಗಿದ್ದ ಸಂದರ್ಭದಲ್ಲಿನ ಲೆಟರ್‌ಹೆಡ್ ಬಳಸಿ ವೈರಲ್ ಮಾಡುತ್ತಿದ್ದಾರೆ. ವೈರಲ್ ಆಗುತ್ತಿರುವ ಪತ್ರದಲ್ಲಿ ಕಲಬುರಗಿಯ ಶಾಂತಿನಗರದಲ್ಲಿನ ಮನೆಯ ವಿಳಾಸವಿದೆ. ಹೊಸ ಲೆಟರ್‌ಹೆಡ್‌ನಲ್ಲಿ ಅಕ್ಕಮಹಾದೇವಿ ಕಾಲನಿಯಲ್ಲಿನ ಮನೆಯ ವಿಳಾಸವಿದೆ'' ಎಂದರು.
''ನನ್ನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಬಿಜೆಪಿಯವರು ಈ ರೀತಿ ಮಾಡಿರಬಹುದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇನೆ'' ಎಂದು ಬಿ.ಆರ್.ಪಾಟೀಲ್ ತಿಳಿಸಿದರು.