ರಾಜ್ಯಾದ್ಯಂತ 381 ಮಂದಿಗೆ ಡೆಂಗ್ಯೂ ದೃಢ, 88 ಮಂದಿ ಆಸ್ಪತ್ರೆಗೆ ದಾಖಲು

Update: 2024-07-11 16:30 GMT

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೆ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 381 ಹೊಸ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿರುವುದು ಆಂತಕಕ್ಕೆ ಎಡೆ ಮಾಡಿದೆ.

ಒಂದೇ ದಿನ 88 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 2503 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 4, 1-18 ವರ್ಷದ 140 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 237 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ಕಳೆದ 24 ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 481 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 171 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 12 ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ 19 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇಬ್ಬರಿಗೆ ಡೆಂಗ್ಯೂ ದೃಢಪಟ್ಟಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗದಲ್ಲಿ 126ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 17 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಹತ್ತು ಮಂದಿ ಆಸ್ಪತ್ರೆಗೆ ಸೇರಿದ್ದಾರೆ.

ಬಾಗಲಕೋಟೆಯಲ್ಲಿ 17 ಪರೀಕ್ಷೆ ಮಾಡಲಾಗಿದೆ. ಮಂಡ್ಯದಲ್ಲಿ 30 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 18 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. 15 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 18 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 5 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಹೀಗೆ ಕಳೆದ 24 ಗಂಟೆಗಳಲ್ಲಿ 2053 ಮಂದಿಗೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 381 ಮಂದಿಗೆ ಡೆಂಗ್ಯೂ ದೃಢವಾಗಿದೆ. ಜತೆಗೆ, 88 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 61,037 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 8221 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 362 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News