ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ, ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ : ದಿನೇಶ್ ಗುಂಡೂರಾವ್

Update: 2024-07-22 13:41 GMT

ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರತೆ ಉಂಟಾಗಿಲ್ಲ. ಅಗತ್ಯ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಸ್.ನಾರಾಯಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ಎಲ್ಲಾದರೂ ಕೊರತೆ ಕಂಡುಬಂದಲ್ಲಿ ನಮ್ಮ ಗಮನಕ್ಕೆ ತಂದರೆ ತಕ್ಷಣವೇ ಪೂರೈಕೆ ಮಾಡಲಾಗುವುದು ಎಂದರು.

ಆರೋಗ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಇನ್ನು ಮುಂದೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನ ವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.

ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News