ಮೈತ್ರಿ ಬಗ್ಗೆ ನಾಳೆ (ಸೆ. 21) ಬಿಜೆಪಿ ವರಿಷ್ಠರ ಜತೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

Update: 2023-09-20 13:09 GMT

ಬೆಂಗಳೂರು, ಸೆ. 20: ‘ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ನಾನು ಗೆದ್ದಿದ್ದೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಚನ್ನಪಟ್ಟಣ ಕ್ಷೇತ್ರದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಯಾವುದೇ ಆಲೋಚನೆಯೂ ನಾನು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಸ್ಪಷ್ಟಣೆ ನೀಡಿದರು.

ಮೈತ್ರಿ: ‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ನಾಳೆ(ಸೆ. 21) ಹೊಸದಿಲ್ಲಿಗೆ ಹೋಗುತ್ತಿದ್ದೇನೆ. ಬಿಜೆಪಿ ಪಕ್ಷದ ಹೈಕಮಾಂಡ್‍ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೊಣ’ ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸರಕಾರ ವಜಾ ಮಾಡಲು ಒತ್ತಾಯ: ‘ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು’ ಎಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

‘ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್‍ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೂಪನ್‍ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

‘ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆಯೇ. ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು. ಅವುಗಳಿಂದಲೇ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಇದಕ್ಕೆಲ್ಲ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ಚನ್ನಪಟ್ಟಣದಲ್ಲಿ ನಮ್ಮ ಜನ ಇಂತಹ ಆಮಿಷಗಳಿಗೆ ಮರುಳು ಆಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲಾ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್‍ಗಳನ್ನು ಹಂಚಿಕೆ ಮಾಡಲಾಯಿತು. ಚುನಾವಣಾ ಆಯೋಗ ಸರಿಯಾಗಿ ತನಿಖೆ ಮಾಡಿದರೆ, ಸತ್ಯ ಹೊರಬರುತ್ತದೆ. ಈ ಸರಕಾರವನ್ನು ವಜಾ ಮಾಡಬೇಕು ಎಂದರು.

ಈವರೆಗೂ ರಾಜ್ಯದಲ್ಲಿ ಇಂಥ ಅಕ್ರಮ ಸರಕಾರ ಬಂದಿಲ್ಲ. ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಿದರೆ ಈ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಸರಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News