ಎಚ್‌ಡಿಕೆಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು : ಡಿ.ಕೆ.ಶಿವಕುಮಾರ್ ವಾಗ್ದಾಳಿ

Update: 2024-08-10 13:49 GMT
ಡಿ.ಕೆ.ಶಿವಕುಮಾರ್/ಕುಮಾರಸ್ವಾಮಿ(PC: X)

ಕನಕಪುರ : ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಶನಿವಾರ ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ?. ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ” ಎಂದು ತಿಳಿಸಿದರು.

‘ನಾನು ಬಡವರ ಆಸ್ತಿ ಲೂಟಿ ಮಾಡಿದ್ದೇನೆ ಎನ್ನುವ ಕುಮಾರಸ್ವಾಮಿ, ಆತನನ್ನು ನನ್ನ ಮುಂದೆ ಕರೆದುಕೊಂಡು ಬಂದು ನಿಲ್ಲಿಸಲಿ. ನಾವು ಬಡವರಿಗೆ ತೊಂದರೆ ನೀಡಿ ಆಸ್ತಿ ಕಿತ್ತುಕೊಂಡಿರುವುದು ನಮ್ಮ ಜಾಯಮಾನದಲ್ಲಿಲ್ಲ. ಕುಮಾರಸ್ವಾಮಿ ಅವರ ಬಗ್ಗೆ ಯೋಗೇಶ್ವರ್ ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಅವರ ಬಗ್ಗೆ ಯೋಗೇಶ್ವರ್ ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.

ಶಿವಕುಮಾರ್ ನನ್ನ ಮೇಲೆ ಕಲ್ಲು ಬಂಡೆ ಎತ್ತಿಹಾಕಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಾನು ಯಾವ ರೀತಿ ಅವರ ಮೇಲೆ ಬಂಡೆ ಹಾಕಿದ್ದೇನೆ ಎಂದು ಅವರು, ಅವರ ಪಕ್ಷದ ನಾಯಕರು ಹೇಳಲಿ. ಅವರ ಮಾತುಗಳನ್ನು ಕೇಳುತ್ತಿದ್ದರೆ, ಅವರಿಗೆ ಚಿಕಿತ್ಸೆ ಕೊಡಿಸುವುದು ಉತ್ತಮ” ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News