ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿರುವವರಿಗೆ ಪರಿಹಾರ ನೀಡಲು ಸಮಿತಿ ರಚನೆ : ಡಿ.ಕೆ. ಶಿವಕುಮಾರ್

Update: 2024-10-24 16:11 GMT

ಬೆಂಗಳೂರು : ನಗರದಲ್ಲಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಸಮಸ್ಯೆ ಅನುಭವಿಸುತ್ತಿರುವವರಿಗೆ ಪರಿಹಾರವನ್ನು ನೀಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಮುಂದಿನ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲೆಲ್ಲಿ ಮಳೆನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಲಾಗುತ್ತದೆ. ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್ ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದರು.

ಎಲ್ಲ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆನೀರು ಸರಾಗವಾಗಿ ಹರಿಯುವಂತೆ ಮಾಡಲು ಯೋಜನೆ ಸಿದ್ಧಪಡಿಸಲಾಗುತ್ತದೆ. ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚೇತನಗೊಳ್ಳಬೇಕು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕೆರೆಗಳಿಗೆ ಕೊಳಚೆ ನೀರನ್ನು ಹರಿಸುವುದಿಲ್ಲ. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕೆರೆಗಳ ನಡುವೆ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ರಾಜಕಾಲುವೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಪ್ರವಾಹದ ನೀರು ಕೆರೆಗೆ ಹೋಗುವುದು ಹಾಗೂ ಕೆರೆಯಿಂದ ಕೋಡಿ ಬೀಳುವ ನೀರು ಸರಾಗವಾಗಿ ಹೋಗಲು ಅನುವಾಗುವಂತೆ ಗೇಟ್ ಅಳವಡಿಸಲು ಸೂಚಿಸಿದ್ದೇನೆ. ಇದಕ್ಕೆ ಬೇಕಾಗಿರುವ ಮೂಲಸೌಕರ್ಯ ತಯಾರಿ ಮಾಡಿಕೊಳ್ಳಲು ಬಿಡಿಎ, ಬಿಬಿಎಂಪಿ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರದವರಿಗೆ ಸೂಚಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ರಾಜಕಾಲುವೆ ಅಕ್ಕಪಕ್ಕ 50 ಅಡಿ ಕಟ್ಟಡ ನಿರ್ಮಾಣ ಮಾಡುವಂತಿಲ್ಲ: ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟುವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗುವುದು. ಇದರಿಂದ ಒತ್ತುವರಿ ನಿಲ್ಲುತ್ತದೆ ಹಾಗೂ ಮಳೆನೀರು ಹರಿಯಲು ನೆರವಾಗುತ್ತದೆ. ಯೋಜನೆಯ ಆರಂಭಿಕ ಹಂತಕ್ಕೆ ಹಣ ಮೀಸಲಿಡಲಾಗಿದೆ. ಈ ಭಾಗದ ಭೂಮಾಲೀಕರಿಗೆ ಟಿಡಿಆರ್ ಮೂಲಕ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರಗಳು ಭರದಿಂದ ಸಾಗುತ್ತಿದೆ. ಕೇಂದ್ರಿಯ ವಿಹಾರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ನಿವಾಸಿಗಳನ್ನು ಸ್ಥಳಾಂತರ ಮಾಡಿದ್ದೇವೆ. ನೀರನ್ನು ಹೊರತೆಗೆಯಲಾಗುತ್ತಿದೆ. ಕೆಲವು ಕುಟುಂಬಗಳು ಸ್ಥಳಾಂತರಗೊಳ್ಳಲು ಒಪ್ಪದ ಕಾರಣ ಅವರ ಜವಾಬ್ದಾರಿ ವಹಿಸಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳು ಪಾಲಿಕೆ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸಲು ಆದೇಶ ನೀಡಲಾಗಿದೆ. ನಂಜಪ್ಪ ಗಾರ್ಡನ್ ಪ್ರದೇಶದಲ್ಲಿ ನೆಲಮಹಡಿ ಜತೆಗೆ 5 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಲು ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ಕಟ್ಟಡಗಳ ಸಮೀಕ್ಷೆ: ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆಹಚ್ಚಲಾಗುವುದು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News