ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ : ಡಿಸಿಎಂ ಡಿ.ಕೆ.ಶಿವಕುಮಾರ್
ಡಿ.ಕೆ. ಶಿವಕುಮಾರ್
ಬೆಂಗಳೂರು : “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ” ಎಂದು ತಿಳಿಸಿದರು..
“ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು” ಎಂದು ಹೇಳಿದರು.
“ಈ ಘಟನೆ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ” ಎಂದರು.
“ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.