ಸಿಬಿಐ ತನಿಖೆ ವಾಪಸ್: ಯಾರ ಮನಸ್ಸಿನಲ್ಲಿ ಏನೇನಿದೆ ಎಂಬದು ಅರ್ಥವಾಗುತ್ತಿದೆ ಎಂದ ಡಿ.ಕೆ. ಶಿವಕುಮಾರ್

Update: 2023-11-27 13:38 GMT

ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: ಸಚಿವ ಸಂಪುಟವು ತನ್ನ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆದಿರುವುದರಿಂದ ಯಾರ, ಯಾರ ಮನಸ್ಸಿನಲ್ಲಿ ಏನೇನಿದೆ ಎಂಬದು ಅರ್ಥವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ, ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ ಎಂದರು.

ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಅವರು ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಪರ ಅಲೆ: ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೆ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ ಎಂದು ಶಿವಕುಮಾರ್ ಹೇಳಿದರು.

ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ. ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು 5 ದಿನಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು ಎಂದು ಅವರು ಹೇಳಿದರು.

ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ ಎಂದು ಶಿವಕುಮಾರ್ ವ್ಯಂಗ್ಯವಾಡಿದರು.

ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಪ್ಲಾನ್ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ‘ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮಾತನಾಡಲು ಆಗುವುದಿಲ್ಲ. ಅವರು ಅವರದೇ ಪಕ್ಷದ ವಕ್ತಾರರಾಗಿ ಅವರ ಪಕ್ಷವನ್ನು ಸರಿಪಡಿಸಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.

ಬೋಗಸ್ ಜನತಾ ದರ್ಶನ, ಸರಕಾರ ಈಗ ಎಚ್ಚರವಾಗಿದೆ ಎಂದು ಆರ್.ಆಶೋಕ್ ಮಾಡಿದ ಆರೋಪದ ಬಗ್ಗೆ ಕೇಳಿದಾಗ ‘ಹೊಸದಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೊಸದರಲ್ಲಿ ಜೋರಾಗಿ ಬಟ್ಟೆ ಒಗೆಯಲಿ. ನಾವು ಎಲ್ಲರ ಮನಸ್ಥಿತಿ ಅರಿಯುತ್ತಿದ್ದೇವೆ’ ಎಂದು ಛೇಡಿಸಿದರು.

ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂದು ಕೇಳಿದಾಗ ‘ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

(ಅಮ್ಜದ್)

.......................

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News