ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ : ಡಿ.ಕೆ.ಸುರೇಶ್

Update: 2024-11-23 07:32 GMT

ಡಿ.ಕೆ.ಸುರೇಶ್

ಬೆಂಗಳೂರು : “ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

“ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೇಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ” ಎಂದರು.

ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಅವರು ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News