ವಿಧಾನ ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು : ಡಿ.ಕೆ.ಶಿವಕುಮಾರ್

Update: 2024-05-28 08:06 GMT

ಬೆಂಗಳೂರು : "ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ನೋಡೋಣ." ಎಂದರು.

ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಖಂಡಿತ, ನಾವು ಅವರ ಅಭಿಪ್ರಾಯವನ್ನು ಕೇಳುತ್ತೇವೆ" ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದಾಗ, "ಈ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ" ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News