ʼಯುಜಿಸಿ ಹೊಸ ನಿಯಮಾವಳಿಗಳು ಅವೈಜ್ಞಾನಿಕʼ ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪತ್ರ
ಬೆಂಗಳೂರು: ವಿಶ್ವವಿದ್ಯಾಲಯಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಹೊರಡಿಸಿರುವ ಹೊಸ ನಿಯಮಾವಳಿಗಳು ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಕರುಡು ನಿಯಮಾವಳಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದಾರೆ.
ಉಪ ಕುಲಪತಿಗಳನ್ನು ನೇಮಕ ಮಾಡುವ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ರಾಜ್ಯ ಸರಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಉದ್ದೇಶವನ್ನು ನಮ್ಮ ಸರಕಾರ ಬಲವಾಗಿ ಖಂಡಿಸುತ್ತದೆ. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವುದು ಸರಿಯಲ್ಲ ಎಂದು ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಕರುಡು ನಿಯಮಾವಳಿಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ರಾಜ್ಯ ಸರಕಾರಗಳ ಪಾತ್ರವೇ ಇಲ್ಲದಂತೆ ಮಾಡಲಾಗಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣದ ಅಭಿವೃದ್ಧಿಯಲ್ಲಿ ರಾಜ್ಯ ಸರಕಾರ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕವು ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಮುಂದಿದೆ. ಸರಕಾರಿ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸರಕಾರ ಅಗತ್ಯವಾದ ಅನುದಾನವನ್ನು ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೇ, ವಿವಿಗಳಲ್ಲಿ ಕೈಗೊಳ್ಳುವ ಅಭಿವೃದ್ಧಿ ಕೆಲಸಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವೇತನ, ಪಿಂಚಣಿಯನ್ನು ರಾಜ್ಯ ಸರಕಾರದ ಖಜಾನೆಯಿಂದಲೇ ಭರಿಸಲಾಗುತ್ತಿದೆ. ಅಲ್ಲದೇ, ವಿವಿಗಳ ಸಮಸ್ಯೆಗಳನ್ನು ರಾಜ್ಯ ಸರಕಾರವೇ ಬಗೆಹರಿಸುತ್ತಿದೆ. ವಿಧಾನಮಂಡಲದ ಸದನಗಳಲ್ಲಿಯೂ ವಿವಿಗಳ ಕುರಿತು ಅನೇಕ ವಿಚಾರಗಳು ಚರ್ಚೆ ನಡೆಯುತ್ತದೆ. ಅದಕ್ಕೆಲ್ಲ ಸರಕಾರವೇ ಉತ್ತರ ನೀಡುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
ವಿವಿಗಳಿಗೆ ಸಂಬಂಧಿಸಿದ ರಾಜ್ಯ ಸರಕಾರಗಳ ಅಧಿಕಾರವನ್ನು ಮೊಟಕುಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜನತೆಗೆ ಗುಣಮಟ್ಟದ ಹಾಗೂ ಕೈಗೆಟುಕುವಂತೆ ಉನ್ನತ ಶಿಕ್ಷಣ ನೀಡುವುದು ಚುನಾಯಿತ ಸರಕಾರದ ಜವಾಬ್ದಾರಿಯಾಗಿದೆ. ಆದರೆ, ಯುಜಿಸಿ ಹೊರಡಿಸಿರುವ ಕರುಡು ನಿಯಮಾವಳಿಗಳು ಈ ಜವಾಬ್ದಾರಿಯ ಮೇಲೆ ದಾಳಿ ಮಾಡುವಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಯುಜಿಸಿ ಈಗಿರುವ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುವ ಮುನ್ನ ಪ್ರಸಕ್ತ ಸನ್ನಿವೇಶದಲ್ಲಿ ವಿಶ್ವವಿದ್ಯಾಲಯಗಳು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ರಾಜ್ಯ ಸರಕಾರಗಳ ಜೊತೆ ಸಂವಾದ ನಡೆಸಿದರೇ ಉತ್ತಮ ಎಂದು ಸುಧಾಕರ್ ಸಲಹೆ ನೀಡಿದ್ದಾರೆ.
ಆದುದರಿಂದ, ಯುಜಿಸಿಗೆ ಕರುಡು ನಿಯಮಾವಳಿಗಳನ್ನು ತಕ್ಷಣವೇ ಹಿಂಪಡೆಯಲು ಹಾಗೂ ದೇಶದಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಗಳ ಜೊತೆ ವ್ಯಾಪಕ ಸಮಾಲೋಚನೆಗಳನ್ನು ನಡೆಸಲು ನಿರ್ದೇಶನ ನೀಡುವಂತೆ ಸುಧಾಕರ್ ಮನವಿ ಮಾಡಿದ್ದಾರೆ.