ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಘೋಷಿಸಿದರು.
ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತರ್ ರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ತರಬೇತಿ ಅಗತ್ಯವಿದೆ ಎಂದು ಹೇಳಿದರು.
ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ್ತು ಅದಕ್ಕೆ ಅನುಗುಣವಾಗಿ ನಮ್ಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದರು.
ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಅವಧಿಯಲ್ಲಿ ಜರ್ಮನ್, ಜಪಾನೀಸ್, ಇಟಾಲಿಯನ್ ಮತ್ತು ಇಂಗ್ಲಿಷ್ ಕಲಿಯುವ ಆಯ್ಕೆಯನ್ನು ಹೊಂದಿರುತ್ತಾರೆ. ಅವರು ವಿದೇಶಿ ಉದ್ಯೋಗಾವಕಾಶಗಳಿಗೆ ತಮ್ಮನ್ನು ತಾವು ಸಿದ್ಧಗೊಳಿಸಿಗೊಳ್ಳುತ್ತಾರೆ ಎಂದು ಶರಣ ಪ್ರಕಾಶ್ ಪಾಟೀಲ್ ವಿವರಿಸಿದರು.
ಕಳಪೆ ಗುಣಮಟ್ಟದ ಪ್ಯಾರಾ ಮೆಡಿಕಲ್ ಕಾಲೇಜು ಮುಚ್ಚಲು ಕ್ರಮ: ಕಳಪೆ ಗುಣಮಟ್ಟದ ಪ್ಯಾರಾಮೆಡಿಕಲ್, ಜಿಎನ್‍ಎಂ ಮತ್ತು ನರ್ಸಿಂಗ್ ಕಾಲೇಜುಗಳನ್ನು ಮುಚ್ಚುವ ಅಗತ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ, ಉತ್ತಮ ಬೋಧನೆ ಮತ್ತು ಅತ್ಯಾಧುನಿಕ ಮೂಲಸೌಕರ್ಯ ಒದಗಿಸಲು ನಮ್ಮ ಸರಕಾರ ಬದ್ಧವಾಗಿದೆ. ವೃತ್ತಿಪರ ವೈದ್ಯಕೀಯ ಕಾಲೇಜುಗಳು ತಮ್ಮ ಕ್ಯಾಂಪಸ್‍ಗಳಲ್ಲಿ ಸಂಬಂಧಿತ ಆರೋಗ್ಯ ವಿಜ್ಞಾನ ಕೋರ್ಸ್‍ಗಳನ್ನು ಪರಿಚಯಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿ.ಎಸ್.ಕುಬೇರ್ ಮತ್ತು ಕಲಬುರಗಿ ಸಂಸದ ಮತ್ತು ಸಂಸ್ಥೆಯ ಖಜಾಂಚಿ ರಾಧಾಕೃಷ್ಣ ದೊಡ್ಡಮನಿ ಹಾಜರಿದ್ದರು.