ಹುಲಿ ಸಂರಕ್ಷಿತ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ: ಪತ್ರಕರ್ತ ವಿಶ್ವೇಶ್ವರ ಭಟ್ ರಿಗೆ RFO ನೋಟಿಸ್
ಚಾಮರಾಜನಗರ, ಜ.14: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ಚಿತ್ರೀಕರಣ ಮಾಡಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ಕಾರಣ ಕೇಳಿ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ(ಆರ್.ಎಫ್.ಒ.) ನೋಟಿಸ್ ನೀಡಿದ್ದಾರೆ.
‘ಬೆಟ್ಟದಲ್ಲಿ ಅನುಮತಿ ಇಲ್ಲದೆ ಡ್ರೋನ್ ಮೂಲಕ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರ ಸೆಕ್ಷನ್ 28, 1(ಬಿ) ಉಲ್ಲಂಘನೆಯಾಗಿದೆ. ಬೆಟ್ಟದ ತಪ್ಪಲಿನಿಂದ ಬೆಟ್ಟಕ್ಕೆ ತೆರಳಲು ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇರುತ್ತದೆ. ಆದರೆ ನೀವು ಚಿತ್ರಗಳನ್ನು ಪೋಸ್ಟ್ ಮಾಡಿ 'ಸಂಜೆ 6 ಗಂಟೆಗೆ' ಎಂದು ನಮೂದಿಸಿದ್ದೀರಿ. ಆದ್ದರಿಂದ ಈ ಎರಡು ವಿಷಯಗಳ ಬಗ್ಗೆ ಈ ಪತ್ರ ತಲುಪಿದ ಕೂಡಲೇ ಕಚೇರಿಗೆ ಹಾಜರಾಗಿ ಸ್ಪಷ್ಟೀಕರಣ ನೀಡಬೇಕು’ ಎಂದು ನೋಟಿಸ್ ನಲ್ಲಿ ಆರ್.ಎಫ್.ಒ. ಮಂಜುನಾಥ್ ಸೂಚಿಸಿದ್ದಾರೆ.
ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಡ್ರೋನ್ ಕ್ಯಾಮರಾದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ನೀಡುವಂತೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಣ್ಯಾಧಿಕಾರಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್ ರಿಗೆ ನೋಟಿಸ್ ಜಾರಿಯಾಗಿದೆ.