ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಬರಗಾಲ ಘೋಷಣೆ: ಕಂದಾಯ ಸಚಿವ ಕೃಷ್ಣಭೈರೇಗೌಡ
ಬೆಂಗಳೂರು, ಜು.21: ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ನಿಯಮ 69 ರಡಿ ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ. ಹಲವೆಡೆ ಬೆಲೆ ನಷ್ಟವಾಗಿದೆ. ಹೀಗಾಗಿ ಬರಗಾಲ ಘೋಷಿಸಿ ರೈತರಿಗೆ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ಹಲವು ಶಾಸಕರು ಒತ್ತಾಯಿಸಿದರು.
ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಅಲ್ಲದೆ, ಬರ ಘೋಷಣೆಗೆ ಕೇಂದ್ರ ಸರ್ಕಾರದ ಕೆಲವು ಮಾನದಂಡಗಳಿವೆ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ನೀರಿಗೆ ಸಮಸ್ಯೆ ಇಲ್ಲ: ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ.29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರೂ ಸಹ, ಕೆಲವು ಜಿಲ್ಲೆಗಳು ಈಗಲೂ ಮಳೆ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ 330 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. 404 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ಹೊರೆಯನ್ನು ಸರಕಾರ ಗ್ರಾಮ ಪಂಚಾಯಿತಿಗಳ ಮೇಲೆ ಹೊರಿಸಿಲ್ಲ ಎಂದು ಅವರು ಹೇಳಿದರು.