ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಬರ ಘೋಷಣೆ’ ಸಾಧ್ಯತೆ: ಸಚಿವ ಚಲುವರಾಯಸ್ವಾಮಿ

Update: 2023-08-31 16:27 GMT

ಬೆಂಗಳೂರು, ಆ.31: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದ ಕಾರಣ, ಸೆ.4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಗುರುವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿದ ನಂತರ ಕೇಂದ್ರ ಸರಕಾರ ಬರಗಾಲ ನಿರ್ವಹಣೆಗೆ ಬೇಕಾದ ನೆರವು ನೀಡುತ್ತದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮಾನುಸಾರ ಕೇಂದ್ರದಿಂದ ಪರಿಹಾರ ನೀಡಲಾಗುತ್ತದೆ. ಜತೆಗೆ ವಿಮೆಯೂ ದೊರೆಯಲಿದೆ. ಆದರೆ ರೈತರಿಗೆ ಪರಿಹಾರ ಒದಗಿಸಿದರೂ, ಮಳೆ ಬೀಳದೆ ಇದ್ದಲ್ಲಿ ಭಾರೀ ಸಂಕಷ್ಟಕ್ಕೆ ರೈತ ವರ್ಗ ಸಿಲುಕಲಿದೆ ಎಂದರು.

ಅದು ಅಲ್ಲದೆ, ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ ತಿಂಗಳಿನಲ್ಲಿ ಹೆಚ್ಚಿನ ಮಳೆ ಬೀಳುವ ನಿರೀಕ್ಷೆ ಇತ್ತು. ಆದರೆ ರಾಜ್ಯದಲ್ಲಿ ಈ ತಿಂಗಳು ಶೇ.99ರಷ್ಟು ಮಳೆ ಕೊರತೆಯಾಗಿದೆ. 130 ತಾಲೂಕಿನಲ್ಲಿ ಬರ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿ ಸರಕಾರದ ಕೈ ಸೇರಲಿದ್ದು, ಇದನ್ನು ಆಧರಿಸಿ ಬರ ಘೋಷಣೆ ಕುರಿತು ಸೆಪ್ಟೆಂಬರ್ ಮೊದಲ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬರದಿಂದ ಸಂಕಷ್ಟದಲ್ಲಿ ಇರುವ ರೈತರ ನೆರವಿಗೆ ಸರಕಾರ ಸಿದ್ಧವಿದೆ. ಸರಕಾರದ ಮಟ್ಟದಲ್ಲೂ ಶಾಸಕರು ಹಾಗೂ ಹಲವು ಮಂತ್ರಿಗಳು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ಐದು ಗ್ಯಾರೆಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಎರಡು ದಿನಗಳಲ್ಲಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹೋಗುತ್ತದೆ. ಆ.1ರಂದೇ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಜಾರಿಗೊಳಿಸಿದ್ದೇವೆ. 15 ಲಕ್ಷ ರೂ.ಗಳವರೆಗೆ ಶೇ.3ರಷ್ಟು ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು ಎಂದು ಅವರು ಹೇಳಿದರು.

ದೇಶದಲ್ಲಿರುವ ಯಾವ ರಾಜ್ಯದಲ್ಲಿಯೂ ಇದುವರೆಗೂ ಇಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ. ಈಗ ಚುನಾವಣೆ ನಡೆಯುವ ರಾಜ್ಯದಲ್ಲಿಯೂ ನಮ್ಮ ರಾಜ್ಯದಲ್ಲಿ ಜಾರಿಯಾಗಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿ ಮಾಡಲಾಗುತ್ತಿದೆ. ಈ ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ಇನ್ನು ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ಸೆ.1ರಂದು ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತದೆ. ನೀರು ಬಿಡಲು ಸಾಧ್ಯವಿಲ್ಲವೆಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಮಳೆಯಾಗದ ಹಿನ್ನೆಲೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದೇವೆ ಎಂದರು.

ಕಾವೇರಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರಗಳ ವಿರುದ್ಧ ಪದೇ ಪದೇ ಸುಪ್ರಿಂ ಕೋರ್ಟ್‍ಗೆ ಹೋಗಲು ಸಾಧ್ಯವಿಲ್ಲ. ಏಕೆಂದರೆ ಪ್ರಾಧಿಕಾರವು ಸುಪ್ರಿಂ ಕೋರ್ಟ್ ಆದೇಶದಂತೆ ರಚನೆಯಾಗಿದೆ ಎಂದು ಅವರು, ಮೇಕೆದಾಟು ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲಿದೆ. ಇದಕ್ಕೆ ಕೇಂದ್ರ ಒಪ್ಪಿಗೆ ಬೇಕಾಗಿದ್ದು, ಒಪ್ಪಿಗೆ ಪಡೆಯಲು ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News