ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ನನ್ನ ಆದ್ಯತೆ: ಎಚ್.ಡಿ.ಕುಮಾರಸ್ವಾಮಿ

Update: 2023-12-05 18:14 GMT

ಬೆಳಗಾವಿ: ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ಬರ ನಿರ್ವಹಣೆ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸುವುದು ನನ್ನ ಆದ್ಯತೆ. ಈ ಭಾಗದ ಜನರು ನಮ್ಮಿಂದ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಂಗಳವಾರ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯಲು ನಾವು ಹಾಗೂ ಬಿಜೆಪಿಯವರು ಜಂಟಿಯಾಗಿ ಹೋರಾಟ ಮಾಡುತ್ತೇವೆ. ಅದೇ ರೀತಿ ಜನವರಿಯಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿಯೂ ವರ್ಗಾವಣೆ ದಂಧೆ ಸೇರಿದಂತೆ ಬೇರೆ ಬೇರೆ ವಿಷಯಗಳ ಬಗ್ಗೆ ಮಾತನಾಡುತ್ತೇವೆ ಎಂದರು.

ಬರ ನಿರ್ವಹಣೆಯ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಪಾತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ವರ್ಗಾವಣೆ ವಿಚಾರಗಳ ಬಗ್ಗೆಯೂ ಮಾಹಿತಿ ಇದೆ. ಆದರೆ, ಇಲ್ಲಿ ಕೋಟ್ಯಂತರ ರೂ.ಖರ್ಚು ಮಾಡಿ ಸದನದ ಸಮಯ ವ್ಯರ್ಥ ಮಾಡೋದು ಬೇಡ. ನಾನು ಪಲಾಯನ ಮಾಡಲು ಹೋಗಲ್ಲ. ವೈಯಕ್ತಿಕ ವಿಚಾರಗಳ ಬಗ್ಗೆ ನಾನು ಪ್ರಸ್ತಾಪ ಮಾಡಲ್ಲ ಎಂದರು.

ಸರಕಾರ ಬಂದು ಆರು ತಿಂಗಳು ಆಗಿದೆ. ಇನ್ನೂ ನಾಲ್ಕುವರೆ ವರ್ಷ ಸರಕಾರ ಇರುತ್ತೆ. ಹಂತ ಹಂತವಾಗಿ ನಾವು ಸರಕಾರದ ವಿರುದ್ಧ ಹೋರಾಟಗಳನ್ನು ರೂಪಿಸುತ್ತೇವೆ. ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿ ಎಂದು ಅನೇಕ ಜನ ಹೇಳಿದ್ದಾರೆ. ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು ಎಂದು ಜನರು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News