ಇ-ಸ್ವತ್ತು ಸಮಸ್ಯೆ | ಕಂದಾಯ ಸಚಿವರ ಜೊತೆ ಚರ್ಚಿಸಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Update: 2024-02-14 09:02 GMT

ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದೆ. ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ ಜೊತೆಗೂಡಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದರು.

ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2543 ಪ್ರಕರಣಗಳಿವೆ ಎಂದು ಅವರು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ವಿಲೇಜ್‌ ಪಂಚಾಯತ್‌ ಚೇರ್‌ಮನ್‌, ಗ್ರಾಮ‌ ಠಾಣಾ ಮತ್ತು ಆಶ್ರಯ ಯೋಜನೆ ಎಂದು ಪಹಣಿಯಲ್ಲಿ ನಮೂದಾಗಿರುವುದು, ಇಲ್ಲಿ ಸಾರ್ವಜನಿಕರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದರು.

ಪ್ರಸ್ತುತ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11ಎ‌ ಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ-09 ಮತ್ತು 11 ಎ ವಿತರಿಸುತ್ತಾರೆ. ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ನಮೂನೆ 11ಬಿಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ 11ಬಿ ವಿತರಿಸುತ್ತಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಿ ನಮೂನೆ 11ಬಿಯನ್ನು ಕೈಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News