ಹಂತ-ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಪ್ರಯತ್ನ: ಸಿಎಂ ಸಿದ್ದರಾಮಯ್ಯ

Update: 2024-03-11 16:44 GMT

Photo: X/@CMofKarnataka

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಶೇ.60ರಷ್ಟು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ.ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರಿಗೆ ಸಹಾಯವಾಗಿದೆ. ನಮ್ಮ ಸರಕಾರ ಮಹಿಳೆಯರ ಪರವಾಗಿದೆ ಎಂದರು.

ಈಗಾಗಲೇ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1ಸಾವಿರ ರೂ.ಹೆಚ್ಚಿಸಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೋರಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ 11,500ರೂ. ಹಾಗೂ ಸಹಾಯಕಿಯರಿಗೆ 6ಸಾವಿರ ರೂ.ಗಳು ಗೌರವಧನ ದೊರಕುತ್ತಿದೆ. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಸಮಸ್ಯೆಗಳಾಗುತ್ತಿವೆ. ಹೀಗಾಗಿ ಗೌರವ ಧನವನ್ನು ಹೆಚ್ಚಿಸಬೇಕು ವಿವಿಧ ಸಂಘಟನೆಗಳ ಕಾರ್ಯಕರ್ತೆಯರು ಸಿಎಂಗೆ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ, ಸಿಐಟಿಯು ಮುಖ್ಯಸ್ಥೆ ವರಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News