ಗಣಿ ಗುತ್ತಿಗೆ ಸಮಸ್ಯೆ ಪರಿಹಾರಕ್ಕೆ ಏಕಗವಾಕ್ಷಿ ಮಾದರಿ ವ್ಯವಸ್ಥೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-07-27 13:50 GMT

ಬೆಂಗಳೂರು, ಜು. 27: ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂ ವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ಪ್ರತಿ ತಿಂಗಳು ಅಥವಾ ಎರಡು ತಿಂಗಳಿಗೊಮ್ಮೆ ಸಭೆ ನಡೆಸಿ ಏಕಗವಾಕ್ಷಿ ಮಾದರಿಯಲ್ಲಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ತೀರುವಳಿ ಪಡೆಯಲು ಬಹಳಷ್ಟು ಪ್ರಕರಣಗಳು ಬಾಕಿ ಇರುವ ಕುರಿತು ಚರ್ಚಿಸಲಾಯಿತು. ಇದಕ್ಕೆ ಗಣಿ ಗುತ್ತಿಗೆ ಪಡೆದ ಸಂಸ್ಥೆಗಳು ಅರಣ್ಯೀಕರಣಕ್ಕೆ ಪರ್ಯಾಯ ಭೂಮಿ ನೀಡದೆ ಇರುವುದು ಕಾರಣವೆಂದು ಗುರುತಿಸಲಾಯಿತು. ಇದಕ್ಕಾಗಿ ಆನೆಗಳು ಮತ್ತಿತರ ವನ್ಯಜೀವಿಗಳ ಉಪಟಳದಿಂದಾಗಿ ಕೃಷಿ ಭೂಮಿ ಮಾರಲು ಸಿದ್ಧರಿರುವ ರೈತರು ಅರಸೀಕರೆ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿದ್ದಾರೆ. ಇಂತಹ ರೈತರಿಗೆ ಈ ಸಂಸ್ಥೆಗಳು ಜಮೀನು ಖರೀದಿಸಿ ಅರಣ್ಯೀಕರಣಕ್ಕೆ ಒದಗಿಸಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಖನಿಜಾನ್ವೇಷಣೆಯನ್ನು ಭಾರತ ಸರಕಾರಿ ಸ್ವಾಮ್ಯದ ಕೆಐಓಸಿಎಲ್ ಮತ್ತು ಎಂಇಸಿಎಲ್ ಮೂಲಕ ಕೈಗೊಳ್ಳಲು ಅನುಮತಿಗಾಗಿ ಕೇಂದ್ರ ಸರಕಾರಕ್ಕೆ ಪ್ರವೇಶ್ ಪೆÇೀರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಗಳಿಗೆ ಇರುವ ಆಕ್ಷೇಪಣೆಗಳನ್ನು ಸರಿಪಡಿಸಿ ತ್ವರಿತವಾಗಿ ತೀರುವಳಿ ಪಡೆಯುವಂತೆ ಈ ಸಂಸ್ಥೆಗಳೊಂದಿಗೆ ಚರ್ಚಿಸಬೇಕು ಎಂದು ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೆ ಅಕ್ರಮ ಗಣಿಗಾರಿಕೆಯಿಂದ ಜಪ್ತಿ ಮಾಡಿರುವ 2.7 ದಶಲಕ್ಷ ಮೆಟ್ರಿಕ್ ಟನ್ ಅದಿರು ಅರಣ್ಯ ಪ್ರದೇಶದಲ್ಲಿದ್ದು, ಇವುಗಳ ವಿಲೇವಾರಿಗೆ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಅಡಿ ಬರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಲ್ಲುಗಣಿ ಗುತ್ತಿಗೆದಾರರು ನಿಯಮಗಳ ಉಲ್ಲಂಘನೆ ಮಾಡಿರುವುದಕ್ಕೆ ವಿಧಿಸಿರುವ ದಂಡ ಸಂಗ್ರಹಿಸಲು ಒಟಿಎಸ್ ಯೋಜನೆ ಜಾರಿಗೆ ತರುವ ಕುರಿತ ಪ್ರಸ್ತಾವವನ್ನು ಸಂಪುಟದ ಸಭೆಯಲ್ಲಿ ಮಂಡಿಸಬೇಕು ಎಂದರು.

ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News