ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ಜೂ.3ಕ್ಕೆ ಚುನಾವಣೆ

Update: 2024-06-01 14:29 GMT

PC : PTI 

ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆ(ಜೂ.3)ಗೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.

ಕರ್ನಾಟಕ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ನೈಋತ್ಯ ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಜೂ.3ರ ಬೆಳಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯ ವರೆಗೆ ಮತದಾನ ನಡೆಯಲಿದೆ.

ಈ ಆರು ಕ್ಷೇತ್ರಗಳಲ್ಲಿ ಪಕ್ಷೇತರರು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಲೋಕಸಭಾ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯನ್ನು ಪರಿಷತ್ ಚುನಾವಣೆಯಲ್ಲೂ ಮಾಡಿಕೊಂಡಿವೆ. ಆಡಳಿತಾರೂಢ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಪ್ರತಿಪಕ್ಷ ಬಿಜೆಪಿ 4 ಹಾಗೂ ಜೆಡಿಎಸ್ 2 ಕ್ಷೇತ್ರದಲ್ಲಿ ಸ್ಪರ್ಧಿಸಿದೆ.

ಮತದಾರರ ವಿವರ: ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 1,21,860, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 1,56,623, ನೈಋತ್ಯ ಪದವೀಧರ ಕ್ಷೇತ್ರ್ರದಲ್ಲಿ 85,090 ಪದವೀಧರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 25,309, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 23,402, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 21,549 ಶಿಕ್ಷಕರು ಮತದಾರರಾಗಿದ್ದಾರೆ.

461 ಮತದಾನ ಕೇಂದ್ರಗಳು: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ-47, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ-79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ-44, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ-159, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ -194, ನೈಋತ್ಯ ಪದವೀಧರ ಕ್ಷೇತ್ರದಲ್ಲಿ 108 ಸೇರಿದಂತೆ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತದಾನಕ್ಕೆ ಗುರುತಿನ ದಾಖಲೆಗಳು: ನೋಂದಾಯಿತ ಪದವೀಧರ ಹಾಗೂ ಶಿಕ್ಷಕ ಮತದಾರರು ತಮ್ಮ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್‍ಕಾರ್ಡ್, ಚಾಲನ ಪರವಾನಗಿ, ಭಾರತೀಯ ಪಾಸ್‍ಪೋರ್ಟ್, ರಾಜ್ಯ ಸರಕಾರ, ಕೇಂದ್ರ ಸರಕಾರ, ಸಾರ್ವಜನಿಕ ವಲಯದ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಸಂಸ್ಥೆಗಳಿಂದ ತನ್ನ ಉದ್ಯೋಗಿಗಳಿಗೆ ನೀಡಿದ ಸೇವಾ ಗುರುತಿನ ಚೀಟಿ.

ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು, ಸಂಬಂಧಪಟ್ಟ ಶಿಕ್ಷಕರ, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದಾದ ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯ ನೀಡಿದ ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕ ನ್ಯೂನತೆಯ ಪ್ರಮಾಣಪತ್ರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ನೀಡಲಾಗಿರುವ ವಿಶಿಷ್ಟ ಅಂಗವೈಕಲ್ಯ ಕಾರ್ಡ್. ಈ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

ಬಲಗೈ ತೋರು ಬೆರಳಿಗೆ ಶಾಯಿ: ಕರ್ನಾಟಕ ಈಶಾನ್ಯ ಪದವೀಧರರು, ಬೆಂಗಳೂರು ಪದವೀಧರರು, ಕರ್ನಾಟಕ ಆಗ್ನೇಯ ಶಿಕ್ಷಕರು, ಕರ್ನಾಟಕ ದಕ್ಷಿಣ ಶಿಕ್ಷಕರು, ಕರ್ನಾಟಕ ನೈಋತ್ಯ ಪದವೀಧರರು ಹಾಗೂ ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸುವವರಿಗೆ ಬಲಗೈ ತೋರುವ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. ಜೂ.6ರಂದು ಮತ ಎಣಿಕೆ ಕಾರ್ಯವು ಆಯಾ ಕ್ಷೇತ್ರಗಳಲ್ಲಿ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News