ಅರ್ಹರು ಬಿಪಿಎಲ್ ಕಾರ್ಡ್‍ನಿಂದ ವಂಚಿತರಾಗಬಾರದು : ಸಿಎಂ ಸಿದ್ದರಾಮಯ್ಯ

Update: 2024-11-19 12:39 GMT

ಬೆಂಗಳೂರು: ‘ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡಲಾಗುತ್ತಿದೆ’ ಎಂದು ಕೆಲವು ಮಾಧ್ಯಮಗಳು ವರದಿಯಾಗಿದೆ. ಆದರೆ, ಅರ್ಹರು ಬಿಪಿಎಲ್ ಕಾರ್ಡ್‍ನಿಂದ ವಂಚಿತರಾಗಬಾರದು. ಎಲ್ಲ ಬಡವರಿಗೂ ಬಿಪಿಎಲ್ ಸೌಲಭ್ಯ ದೊರೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ನಗರದ ಕೆಪಿಸಿಸಿ ಹಾಗೂ ಮಹಿಳಾ ಕಾಂಗ್ರೆಸ್ ವತಿಯಿಂದ ಭಾರತ್ ಜೋಡೊ ಸಭಾಂಗಣದಲ್ಲಿ ಆಯೋಜಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರಕಾರಿ ನೌಕರರು ಮತ್ತು ಯಾರು ಆದಾಯ ತೆರಿಗೆ ಪಾವತಿಸುತ್ತಿದ್ದಾರೋ ಅವರಿಗೆ ಮಾತ್ರ ಎಪಿಎಲ್ ಕಾರ್ಡ್ ನೀಡಬೇಕು’ ಎಂದು ಸೂಚಿಸಿದರು.

‘ಕಾಂಗ್ರೆಸ್ ಪಕ್ಷ, ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಅವರು ಯಾವತ್ತೂ ಶ್ರೀಮಂತರ, ಮೇಲ್ಜಾತಿಯವರ ಪರ. 1925ರಲ್ಲಿ ಆರೆಸೆಸ್ಸ್ ಪ್ರಾರಂಭವಾಯಿತು. ಅಂದಿನಿಂದ ಇಂದಿನ ವರೆಗೆ ಪ್ರಜಾಪ್ರಭುತ್ವ, ಮೀಸಲಾತಿ, ಸಂವಿಧಾನದ ಪರವಾಗಿ ಮಾತನಾಡಿಲ್ಲ. ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಕೆಲಸ ಮಾಡೋಣ, ಪಕ್ಷವನ್ನು ಬಲಪಡಿಸುವ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.

ಬಿಜೆಪಿ ಬಡವರ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ ಬಿಜೆಪಿ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ಸಿದ್ದರಾಮಯ್ಯ ಇದೇ ವೇಳೆ ವಿವರಿಸಿದರು.

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ, ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಇಂದಿರಾ ಗಾಂಧಿ ಸ್ಮಾರಕ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪರಿಷತ್ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವರಾದ ರಾಣಿ ಸತೀಶ್, ಎಚ್.ಎಂ. ರೇವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಸಂಸತ್‍ನಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿಗೆ ತಕರಾರು ಇಲ್ಲ: ಸಂಸತ್‍ನಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 2028ರಲ್ಲಿ ಕೊಡುವುದಾಗಿ ಹೇಳುವ ಮೋದಿಯವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ. ಜಿ.ಪಂ., ಪಟ್ಟಣ ಪಂಚಾಯತ್‍ಗಳಲ್ಲಿ ಶೇ.50 ಮಹಿಳಾ ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

‘ಗ್ಯಾರಂಟಿ ಯೋಜನೆ, ಹಲವು ಭಾಗ್ಯ ಯೋಜನೆಗಳು, ಇಂದಿರಾ ಕ್ಯಾಂಟೀನ್, ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್. ದೇಶದ ಬಜೆಟ್ 48ಲಕ್ಷ ಕೋಟಿ. ಅದರಲ್ಲಿ 60ಸಾವಿರ ಕೋಟಿ ರೂ.ಗಳನ್ನು ಮಾತ್ರ ಎಸ್‍ಸಿಎಸ್‍ಪಿ, ಟಿ.ಎಸ್.ಪಿ ಯೋಜನೆಯಡಿ ವೆಚ್ಚ ಮಾಡುತ್ತಿದ್ದಾರೆ. ನಮ್ಮ ಸರಕಾರ 3,71,000ಕೋಟಿ ರೂ.ಬಜೆಟ್‍ನಲ್ಲಿ 39,121 ಕೋಟಿ ರೂ.ಗಳನ್ನು ಪರಿಶಿಷ್ಟರಿಗೆ ಮೀಸಲಿಟ್ಟಿದ್ದೇವೆ. 32ಸಾವಿರ ಕೋಟಿ ರೂ. ಗೃಹಲಕ್ಷ್ಮಿಗೆ ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 56ಸಾವಿರ ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವದ ಪರವಾಗಿರುವುದು ಕಾಂಗ್ರೆಸ್ ಪಕ್ಷ ಮಾತ್ರ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News