ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Update: 2023-09-09 04:21 GMT

ಬೆಂಗಳೂರು, ಸೆ. 8: ʼಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

‘ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಇಲ್ಲಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‍ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್‍ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ 100 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು’ ಎಂದು ತಿಳಿಸಿದರು. 

‘ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತಿ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ’ ಎಂದು ಅವರು ಬಣ್ಣಿಸಿದರು.

‘ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕøತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ’ ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

‘ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ, ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರಕಾರ ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್‍ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ’ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕ್ರೈಸ್ತ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿ ಸಾಧಿಸಿ ನಾಡಿಗೆ ಸೇವೆ ಸಲ್ಲಿಸಿರುವುದಕ್ಕೆ ಮೆಚ್ಚುಗೆ ಸೂಚಿಸಿದರು. ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರೀಸ್ ನಿಲ್ದಾಣ’ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ರಿಝ್ವಾನ್ ಅರ್ಶದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಸೇರಿ ಹಲವು ಧರ್ಮಗುರುಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News